ಗುಂಡ್ಯ:(ನ.23) ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ.
ಈ ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಇನ್ನೂ ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.