ಮಂಗಳೂರು:(ಡಿ.11)ಬಂಗಾಳ ಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Murudeshwara: ಶಾಲಾ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳಲ್ಲಿ ನಾಲ್ವರು ಸಮುದ್ರ ಪಾಲು
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನಲೆ ಗುರುವಾರದಿಂದ ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಶುಕ್ರವಾರವು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಇದರಿಂದಾಗಿ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಶನಿವಾರವೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.