CT Ravi:(ಡಿ.20) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು : ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ಪೋಲಿಸ್ ಕಮಿಷನರ್!!!
“ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ” ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೆ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿ ತಲೆಗೆ ಆದ ಗಾಯಕ್ಕೆ ಪ್ರಥಮ ಚಿಕಿತ್ಸೆ ಕೊಡಿಸಲು ಮೂರು ಗಂಟೆ ತೆಗೆದುಕೊಂಡ ಕರ್ನಾಟಕ ಪೊಲೀಸರು, ಈಗ ಕಳೆದ ಐದಾರು ಗಂಟೆಗಳಿಂದ ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಸುತ್ತಾಡಿಸುತಿದ್ದಾರೆ. ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ಫೋನ್ನಲ್ಲಿ ಮಾತುಕತೆ ನಡೆಸುತ್ತಾ ಏನೋ ಷಡ್ಯಂತ್ರ ಮಾಡುತ್ತಿದ್ದಾರೆ. ನನಗಾಗುವ ಯಾವುದೇ ತೊಂದರೆಗೆ ಪೊಲೀಸ್ ಇಲಾಖೆ ಹಾಗು ಕಾಂಗ್ರೇಸ್ ಸರ್ಕಾರವೇ ಕಾರಣ ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ ಮೊಕದ್ದಮೆ ದಾಖಲಾಗಿದೆ ಎಂಬ ಮಾಹಿತಿಯನ್ನೂ ನೀಡಿಲ್ಲ. ನಾನು ಕೊಟ್ಟ ದೂರನ್ನು ಗಂಟೆಗಟ್ಟಲೆ ಕಾದರೂ ತೆಗೆದುಕೊಂಡಿಲ್ಲ. ಜೀರೋ ಎಫ್ಐಆರ್ ಕೂಡ ಮಾಡಿಲ್ಲ. ಇಲ್ಲಿಂದ ಎಲ್ಲಿಗೆ ಕರೆದುಕೊಂಡು ಹೋಗುತ್ತಾರೆಂದು ಗೊತ್ತಿಲ್ಲ. ಎಫ್‌ಐಆರ್‌ನಲ್ಲಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ 3 ಗಂಟೆ ಕಳೆದಿದೆ. ಪೊಲೀಸ್ ಠಾಣೆಗೆ ಮತ್ತು ನನ್ನನ್ನು ಪೊಲೀಸ್ ಠಾಣೆಗೆ ಏಕೆ ಕರೆತರಲಾಗಿದೆ ಎಂದು ಹೇಳಿಲ್ಲ, ಡಿಸಿಎಂ ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ತಂಡ ನನ್ನನ್ನು ಅಪರಾಧಿಯಂತೆ ನಡೆಸಿಕೊಳ್ಳುತ್ತಿದೆ. ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ, ಜನಪ್ರತಿನಿಧಿಯಾಗಿದ್ದೇನೆ. ಅಪರಾಧಿಯನ್ನು ನಡೆಸಿಕೊಳ್ಳುವಂತೆ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ನಡೆದುಕೊಂಡ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದ್ದಾರೆ ಎಂದು ವಿಡಿಯೋ ಸಂದೇಶದಲ್ಲಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಸಿಟಿ ರವಿ ಅವರನ್ನು ಪೊಲೀಸರು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ ಎಂದು ಬಿಜೆಪಿ ಪ್ರಶ್ನಿಸಿದೆ.