ಬೆಳ್ತಂಗಡಿ :(ಜ.5) ಯಾರೋ ದುಷ್ಟರು ಹತ್ಯೆಗೈಯಲ್ಪಟ್ಟ ಜಾನುವಾರುಗಳ ತಲೆ ಹಾಗೂ ಇತರೇ ತ್ಯಾಜ್ಯಗಳನ್ನು ಸಣ್ಣ ಸಣ್ಣ ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ತುಂಬಿಸಿ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಎಸೆದು ಹೋಗಿರುವ ಘಟನೆ ಡಿ.17 ರಂದು ನಡೆದಿದ್ದು,
ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.
ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಜ.4 ರಂದು ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮಹಮ್ಮದ್ ಇರ್ಷಾದ್ (28) ಮತ್ತು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕರೆ ನಿವಾಸಿ ಮಹಮ್ಮದ್ ಅಜ್ಜಲ್(30) ಬಂಧಿತ ಆರೋಪಿಗಳು. ಆರೋಪಿಗಳನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು. ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ತಂಡ ಭಾಗಿಯಾಗಿದ್ದರು.