ಬೆಂಗಳೂರು(ಜ.13): ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: Mahakumbha Mela 2025: ಪ್ರಯಾಗ್ರಾಜ್ ನಲ್ಲಿ ಇಂದಿನಿಂದ ಮಹಾಕುಂಭ ಮೇಳ ಆರಂಭ
ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಏನಿದು ಘಟನೆ?
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
ಹಸುಗಳ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದರು.