ಬಂಟ್ವಾಳ:(ಮಾ.25) ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗಾ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು.
ಸೋಮವಾರ ವೀರಕಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಕ್ರಮ ಚಟುವಟಿಕೆಗಳು ನಡೆಯುತ್ತಿದೆ,ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ವೀರಕಂಬ ಗ್ರಾಮದಲ್ಲಿ ಆರೋಗ್ಯ ಕೇಂದ್ರ ನಿರ್ಮಿಸಲು ಕಾದಿರಿಸಿದ ಜಾಗದಲ್ಲಿ ಶೀಘ್ರವೇ ಆರೋಗ್ಯ ಉಪ ಕೇಂದ್ರ ರಚಿಸಬೇಕು, ಗ್ರಾಮದಲ್ಲಿರುವ ಗೋಮಾಲ ಜಾಗವನ್ನು ಗಡಿ ಗುರುತು ಮಾಡಬೇಕು, ಘನ ತ್ಯಾಜ್ಯ ಘಟಕ ಕೂಡಲೇ ಉದ್ಘಾಟಿಸಿ, ರಸ್ತೆ ಬದಿಯಲ್ಲಿ ಕಸ ಎಸೆಯುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಗ್ರಾಮಸ್ಥರಿಗೆ ವಿವಿಧ ಇಲಾಖೆಗಳಾದ ಆರೋಗ್ಯ,ಮೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕಾ ಇಲಾಖೆ ವತಿಯಿಂದ ಗ್ರಾಮಸ್ಥರಿಗೆ ಇಲಾಖಾವಾರು ಮಾಹಿತಿ ನೀಡಿದರು.
ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರದೀಪ್ ಭಾಗವಹಿಸಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ಗ್ರಾಮಸ್ಥರು ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿದರು.



ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರುಗಳು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಪಂಚಾಯತ್ ಸಿಬ್ಬಂದಿಗಳು,ಗ್ರಾಮಸ್ಥರು ಭಾಗವಹಿಸಿದ್ದರು.

ಶಾಲಾ ಮಕ್ಕಳು ನಾಡಗೀತೆ ಹಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ ಎಂ ಸ್ವಾಗತಿಸಿ, ಕಾರ್ಯದರ್ಶಿ ಸವಿತಾ ವಂದಿಸಿದರು.
