ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಿಂದೂ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಘಟನೆಯ ವಿವರ ಹೀಗಿದೆ:
ಐತ್ತೂರು ಗ್ರಾಮದ ಜೋಸೆಫ್ ಎಂಬುವವರ ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 15ಕ್ಕೂ ಹೆಚ್ಚು ಮಂದಿ ಬೀಡುಬಿಟ್ಟಿದ್ದರು. ಇದರಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಗುಂಪು ಸ್ಥಳೀಯರನ್ನು ಸೇರಿಸಿ ಮತಾಂತರ ಚಟುವಟಿಕೆ ನಡೆಸುತ್ತಿದೆ ಎಂದು ಹಿಂದೂ ಸಂಘಟನೆಗಳು ಗಂಭೀರವಾಗಿ ಆರೋಪಿಸಿವೆ.
ಈ ಕುರಿತು ವಿಶ್ವ ಹಿಂದೂ ಪರಿಷದ್ ಮುಖಂಡ ಪ್ರಮೋದ್ ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮನೆಯಲ್ಲಿ ಮತಾಂತರ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ದೂರು ಆಧರಿಸಿ ಪೊಲೀಸರು ರಾತ್ರೋರಾತ್ರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸಮಯವಾಗಿದ್ದರಿಂದ ಪೊಲೀಸರು ಮನೆಯೊಳಗೆ ಪ್ರವೇಶಿಸದೇ ಹೊರಭಾಗದಲ್ಲೇ ಕಾವಲು ಕಾಯುತ್ತಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಸ್ಥಳದಲ್ಲಿದ್ದವರನ್ನು ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಹಾಗೂ ಮುಂದಿನ ಕ್ರಮ ಇನ್ನಷ್ಟೇ ತಿಳಿದು ಬರಬೇಕಿದೆ.




