ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಭಾನುವಾರ (ಮೇ 10) ಅಪರಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ನಲ್ಲಿದ್ದ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಘಾಟಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟವರನ್ನು ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಲು ಧಾವಿಸಿದ್ದು, ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.







