ಬೆಳ್ತಂಗಡಿ: ಹೋರಿ ಹಾಯ್ದು ತೀವ್ರವಾಗಿ ಗಾಯಗೊಂಡಿದ್ದ ತಾಲೂಕಿನ ಗೇರುಕಟ್ಟೆ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಮೇ 20) ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ, ಆರಂಭದಲ್ಲಿ ಚಿಕಿತ್ಸೆ ನೀಡಿದ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೇರುಕಟ್ಟೆಯಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಮೊಹಮ್ಮದ್ ಶರೀಫ್ (35) ಮೃತಪಟ್ಟ ದುರ್ದೈವಿ. ಮೇ 14 ರಂದು ಮನೆಯಲ್ಲಿದ್ದಾಗ ಇವರ ಮೇಲೆ ಹೋರಿ ಹಾಯ್ದು ತೀವ್ರವಾಗಿ ಗಾಯಗೊಳಿಸಿತ್ತು. ತಕ್ಷಣವೇ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯ ದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮಹಮ್ಮದ್ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು ಅಲ್ಲಿ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 20 ರಂದು ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯ ವ್ಯವಸ್ಥೆಯಿಂದಾಗಿ ಇವರು ಮೃತಪಟ್ಟಿದ್ದಾರೆ ಎಂದು ಮೃತನ ಸಹೋದರ ನಾಸಿರುದ್ದೀನ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 194(3)(4)ರಂತೆ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ರಿ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧ ಪಟ್ಟ ಇಲಾಖೆಯೊಂದಿಗೆ ಕೇಳಿಕೊಳ್ಳಲಾಗಿದ್ದು ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ; ಮೃತರ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮರಣಕ್ಕೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಲಿದೆ.







