ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ.



ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಧರ್ಮಸ್ಥಳ ಪೊಲೀಸರು, ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ ಹಾಗೂ ಪ್ರಸ್ತುತ ಅರಸಿನಮಕ್ಕಿ ಗ್ರಾಮದಲ್ಲಿ ಗ್ರಾಮೀಣ ಅಂಚೆ ವಿತರಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ (35) ಎಂಬಾತನನ್ನು ಜೂನ್ 8ರಂದು ರಾತ್ರಿ ಬಂಧಿಸಿದರು.
ಆರೋಪಿಯನ್ನು ವಿಚಾರಣೆಯ ಬಳಿಕ ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪ್ರಭಾರ ಸಬ್ ಇನ್ಸೆಕ್ಟರ್ ಕಿಶೋರ್ ಪಿ., ಸಬ್ ಇನ್ಸೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿತು.







