ಉಪ್ಪಿನಂಗಡಿ: ಜೀವನದಲ್ಲಿ ನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದಲ್ಲಿ ವರದಿಯಾಗಿದೆ.



ಬಜತ್ತೂರು ಗ್ರಾಮದ ಪುಣಿಕೆದಡಿ ಮನೆ ನಿವಾಸಿ, 48 ವರ್ಷದ ವಸಂತ ಗೌಡ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಜೂನ್ 4ರಂದು ಇವರು ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.
ತಕ್ಷಣವೇ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ಪತ್ನಿ ಮಗನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ.
ಬಳಿಕ ವಸಂತ ಗೌಡರು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಜೀವನದಲ್ಲಿ ನೊಂದು ಅವರು ಈ ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




