ಬೆಳ್ತಂಗಡಿ: ತಾಲೂಕಿನ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ನಲ್ಲಿ ಪ್ರತಿ ತಿಂಗಳಿನಂತೆ ಜೂನ್ ತಿಂಗಳ ಸಿಬ್ಬಂದಿಗಳ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮವು ಜೂನ್ 16ರಂದು ಅತ್ಯಂತ ಸಂಭ್ರಮದಿಂದ ಜರುಗಿತು.


❝ಸಿರಿ ಬ್ರಾಂಡನ್ನು ರಾಷ್ಟ್ರ-ಅಂತಾರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯಿರಿ❞:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರು ಜೂನ್ ತಿಂಗಳಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹಾಗೂ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗಳಿಗೆ ಶುಭ ಹಾರೈಸಿ ಮಾತನಾಡಿದರು.
“ಪೂಜ್ಯ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಮಹಿಳಾ ಸಬಲೀಕರಣದ ಉದಾತ್ತ ಧೈಯೋದ್ದೇಶದಿಂದ ಈ ‘ಸಿರಿ’ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ಎಲ್ಲಾ ಸಿಬ್ಬಂದಿಗಳು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ‘ಸಿರಿ’ ಬ್ರಾಂಡ್ ಅನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯಬೇಕು. ಆ ಮೂಲಕ ಪೂಜ್ಯ ದಂಪತಿಗಳ ಕನಸನ್ನು ನನಸಾಗಿಸಬೇಕು,” ಎಂದು ಅವರು ಸಿಬ್ಬಂದಿಗಳಿಗೆ ಪ್ರೇರಣೆ ನೀಡಿದರು.
ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು ಎ.ವಿ. ಶೆಟ್ಟಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಅರುಣಾ ವಿ. ಶೆಟ್ಟಿ ಅವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸಿರಿ ಸಂಸ್ಥೆಯ ಸಮಗ್ರ ಏಳಿಗೆಗಾಗಿ ನಿರಂತರ ಶ್ರಮವಹಿಸಿ, ಸಂಪೂರ್ಣ ಸಹಕಾರ ನೀಡುತ್ತಾ ಬಂದಿರುವ ಎ.ವಿ. ಶೆಟ್ಟಿ ದಂಪತಿಗಳಿಗೆ ಎಲ್ಲಾ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ಧನರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸಿರಿ ಸಿಬ್ಬಂದಿಗಳಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಹೆಗ್ಗಡೆಯವರು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ವಿಡಿಯೋ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಿರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಿರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಸಿರಿ ಸಂಸ್ಥೆಯ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನರವರು ವಂದಿಸಿದರು.





