ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಸಿಎಸ್ಆರ್ ನಿಧಿಯ ಸಹಯೋಗದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಪೌಚ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಹಸ್ತಾಂತರಿಸಿ ಅವರ ಶೈಕ್ಷಣಿಕ ಬದುಕು ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಇಂತಹ ನೆರವು ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಶಿಕ್ಷಣದತ್ತ ಮತ್ತಷ್ಟು ಪ್ರೋತ್ಸಾಹ ನೀಡುವ ಕಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಜಮೀರ್ ಸಹದಿ, ಎಸ್ಎಂಸಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದ ಉಪಸ್ಥಿತರಿದ್ದು ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಶಾಲೆಯ ವತಿಯಿಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಗೆ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿ ಸ್ಮರಣಾರ್ಥ ಕೃತಜ್ಞತಾ ಪತ್ರವನ್ನು ಸಮರ್ಪಿಸಲಾಯಿತು.
ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಕೈಜೋಡಿಸಿರುವ ಸಂಸ್ಥೆಗಳ ಈ ಸಮಾಜಮುಖಿ ಕಾರ್ಯಕ್ಕೆ ಶಾಲಾ ಕುಟುಂಬವು ಅಭಿನಂದನೆ ಸಲ್ಲಿಸಿತು.





