ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅತ್ಯಂತ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಇತ್ತೀಚೆಗಷ್ಟೇ ಪೋಷಕರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಪ್ರೀತಿಯಿಂದ ವಿಚಾರಿಸಿದಾಗ ಈ ಕರಾಳ ಘಟನೆ ಬೆಳಕಿಗೆ ಬಂದಿದೆ.

ದೂರಿನ ಪ್ರಕಾರ, ಈ ಘಟನೆ ನಡೆದಿರುವುದು 2023ರಲ್ಲಿ. ದೂರುದಾರರ ಸಂಬಂಧಿಕನಾಗಿರುವ ಒಬ್ಬ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತ ಸೇರಿ, ಬಾಲಕಿಯನ್ನು ಬೆಳ್ತಂಗಡಿ ಸಮೀಪದ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ. ಅಷ್ಟೇ ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಜೀವ ಬೆದರಿಕೆಯನ್ನೂ ಒಡ್ಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಜೂನ್ 23, 2026ರಂದು ನೀಡಲಾದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376, 376ಎಬಿ, 376ಡಿಬಿ, 506 ಹಾಗೂ 34ರ ಜೊತೆಗೆ ಪೋಕ್ಸ್ ಕಾಯ್ದೆ-2012ರ ಕಲಂ 6ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






