ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ (ರಿ.) ಉಜಿರೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಎನ್.ಎಸ್.ಎಸ್., ಎನ್.ಸಿ.ಸಿ., ರೋವರ್ಸ್ & ರೇಂಜರ್ಸ್ ಘಟಕಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ತಂಗಡಿ ಉಪವಿಭಾಗ ಇವುಗಳ ಜಂಟಿ ಸಹಭಾಗಿತ್ವದಲ್ಲಿ “ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣೆ ವಿರೋಧಿ ಅಂತಾರಾಷ್ಟ್ರೀಯ ದಿನ”ದ ಪ್ರಯುಕ್ತ ಬೃಹತ್ ಜಾಗೃತಿ ಕಾರ್ಯಕ್ರಮ, ‘ನಶಾಮುಕ್ತ ಭಾರತ ಜಾಥಾ’ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವು ಇಂದು (ಜೂನ್ ೨೫) ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಅನಿಲ್ ಕುಮಾರ್ ಭೂಮ ರೆಡ್ಡಿ ಅವರು ಮಾದಕ ದ್ರವ್ಯಗಳ ದುಷ್ಪರಿಣಾಮ ಹಾಗೂ ಯುವಜನತೆ ಇಂತಹ ಹವ್ಯಾಸಗಳಿಂದ ದೂರವಿರಬೇಕಾದ ಅನಿವಾರ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ಶ್ರೀಮತಿ ರೋಹಿಣಿ ಸಿ.ಕೆ., ಬೆಳ್ತಂಗಡಿ ಗ್ರಾಮಾಂತರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀ ರವಿ ಬಿ.ಎಸ್., ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಆನಂದ್ ಎಂ. ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಶ್ರೀ ಸಿಕಂದರ್ ಪಾಷ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.

ನಶಾಮುಕ್ತ ಸಮಾಜ ನಿರ್ಮಾಣದ ಸಂಕಲ್ಪ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಉಜಿರೆ ಎಸ್ಡಿಎಂ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಪ್ರಮುಖ ಆಕರ್ಷಣೆ:
ಕಾರ್ಯಕ್ರಮದ ಅಂಗವಾಗಿ ನಡೆದ ಬೃಹತ್ ಜಾಥಾದಲ್ಲಿ ನೂರಾರು ಸಂಖ್ಯೆಯ ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಮಾದಕ ದ್ರವ್ಯ ಮುಕ್ತ ಸಮಾಜದ ಕುರಿತು ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸಭಾಂಗಣದಲ್ಲಿ ನೆರೆದಿದ್ದ ಎಲ್ಲರೂ ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.







