ಭಟ್ಕಳ: ನಗರದ ಬಂದರ ರಸ್ತೆಯಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಾಲೂಕಿನ ಸಬ್ಬತ್ತಿ ನಿವಾಸಿ, 24 ವರ್ಷದ ಮಧುರ ಮಂಜುನಾಥ ನಾಯ್ಕ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಬೆಳ್ಳೆ ಗರಡಿಹಿತ್ತು ನಿವಾಸಿ ಸುಮೇದ ನಾರಾಯಣ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆ ಮುಂಭಾಗ ಜಮಾಯಿಸಿದ ನೂರಾರು ಜನ:
ಮೃತ ಮಧುರ ನಾಯ್ಕ ಅವರು ತಾಲೂಕಿನ ಭಜರಂಗದಳದ ಸಕ್ರಿಯ ಕಾರ್ಯಕರ್ತರಾಗಿದ್ದರು. ಶನಿವಾರ ಮುಂಜಾನೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಹಾಗೂ ಸಂಘಟನೆಯ ಕಾರ್ಯಕರ್ತರು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಮುಂಭಾಗ ಜಮಾಯಿಸಿದ್ದರು.

ಕುಟುಂಬಕ್ಕೆ ಆಧಾರವಾಗಿದ್ದ ಯುವಕ:
ಇತ್ತೀಚೆಗಷ್ಟೇ ತಂದೆಯನ್ನು ಕಳೆದುಕೊಂಡಿದ್ದ ಮಧುರ, ಇಡೀ ಕುಟುಂಬಕ್ಕೆ ಆಸರೆಯಾಗಿದ್ದರು. ಇದೀಗ ಹೆತ್ತ ಮಗನೂ ಇಲ್ಲದಂತಾಗಿ ಇಡೀ ಕುಟುಂಬವೇ ಬೀದಿಗೆ ಬಿದ್ದಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಊರೇ ಕಣ್ಣೀರಿನಲ್ಲಿ ಮುಳುಗಿದೆ.

ಪೊಲೀಸ್ ತನಿಖೆ ಚುರುಕು:
ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.





