ಪಡುಬಿದ್ರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP), ಕಾಪು ತಾಲೂಕು, ಪಡುಬಿದ್ರೆ ವಲಯದ ವತಿಯಿಂದ ನಂದಿಕೂರು ಸರ್ಕಾರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆನ್ಲೈನ್ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರು ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ, ಉತ್ತಮ ಆರೋಗ್ಯ, ಉತ್ತಮ ಸಂಸ್ಕಾರ ಹಾಗೂ ಮಾದಕ ವ್ಯಸನಗಳಿಂದ ದೂರವಿರುವಂತೆ ಕರೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ್ ಕುಮಾರ್ ಅವರು ಆಶಯ ಭಾಷಣ ಮಾಡಿ, ಯುವಜನರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ವೆಂಕಟೇಶ್ ಪ್ರಸನ್ನ (ಬೆಂಗಳೂರು) ಹಾಗೂ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ವ್ಯಸನದಿಂದ ದೂರವಿರಬೇಕಾದ ಅಗತ್ಯ ಹಾಗೂ ಆರೋಗ್ಯಕರ ಬದುಕಿನ ಮಹತ್ವದ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾಗರಾಜ್ ಭಟ್ ಹಾಗೂ ಸಾಹಿನಾಥ್, ಒಕ್ಕೂಟದ ಅಧ್ಯಕ್ಷೆ ಭೇಬಿ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಮಣಿ, ಶಿಕ್ಷಕ ವೃಂದ ಹಾಗೂ ಸುಮಾರು 110 ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.







