ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ (Red Alert) ಘೋಷಿಸಿದೆ.

ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಕಡ್ಡಾಯ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು.
ಆದರೆ, ಜಿಲ್ಲಾಧಿಕಾರಿಗಳ ಈ ಆದೇಶವನ್ನು ಗಾಳಿಗೆ ತೂರಿದ ಪುತ್ತೂರಿನ ಖಾಸಗಿ ಕಾಲೇಜೊಂದು ರಜೆಯ ದಿನವೂ ತರಗತಿ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪುತ್ತೂರಿನ ಖಾಸಗಿ ಕಾಲೇಜೊಂದರ ಪದವಿ ಪೂರ್ವ (PU) ವಿಭಾಗದಲ್ಲಿ, ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳನ್ನು ಒಟ್ಟುಗೂಡಿಸಿ ಗುರುವಾರ ತರಗತಿಗಳನ್ನು ನಡೆಸಲಾಗಿದೆ ಎಂಬ ದೂರು ಕೇಳಿಬಂದಿದೆ. ಜಿಲ್ಲಾಡಳಿತದ ನಿಯಮ ಉಲ್ಲಂಘಿಸಿ ತರಗತಿ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ನೋಟಿಸ್ ಜಾರಿ ಮಾಡಿದ ತಹಶೀಲ್ದಾರ್:
ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ತಹಶೀಲ್ದಾರ್ ಬಿ.ಎಸ್. ಕೂಡಲಗಿ ಅವರು ತಕ್ಷಣವೇ ಸದರಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳ ಅಧಿಕೃತ ಆದೇಶವನ್ನು ಉಲ್ಲಂಘಿಸಿ ತರಗತಿ ನಡೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಕಾಲೇಜು ಆಡಳಿತ ಮಂಡಳಿಗೆ ಸ್ಥಳದಲ್ಲೇ ಖಡಕ್ ನೋಟಿಸ್ ಜಾರಿ ಮಾಡಿದ್ದಾರೆ.






