ಕಾಪು: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆಗಳ ಮೂಲಕ ದೇಶ-ವಿದೇಶಗಳ ವಿದ್ಯಮಾನಗಳು, ಸಾಮಾಜಿಕ ಬೆಳವಣಿಗೆಗಳು ಹಾಗೂ ಸಮಕಾಲೀನ ವಿಷಯಗಳ ಕುರಿತು ಅರಿವು ಮೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಹೇಳಿದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ದಾಸ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತ ದಿವಂಗತ ಬಿ. ಜಯಂತ್ ಪಡುಬಿದ್ರಿ ಅವರ ಸಂಸ್ಮರಣೆ ಹಾಗೂ ದತ್ತಿನಿಧಿ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳ ನಡುವೆ ಪತ್ರಿಕೋದ್ಯಮದ ಸವಾಲು:
ಹಿರಿಯ ಜಾನಪದ ಚಿಂತಕ ಡಾ. ವೈ. ಎನ್. ಶೆಟ್ಟಿ ಅವರು ದಿವಂಗತ ಬಿ. ಜಯಂತ್ ಪಡುಬಿದ್ರಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿ, ಪ್ರಸ್ತುತ ಪತ್ರಿಕೋದ್ಯಮ ಕ್ಷೇತ್ರವು ವೇಗವಾಗಿ ವಿಸ್ತರಿಸುತ್ತಿದ್ದು, ಸಾಂಪ್ರದಾಯಿಕ ಮಾಧ್ಯಮಗಳಿಗೆ ಸಾಮಾಜಿಕ ಮಾಧ್ಯಮಗಳು ತೀವ್ರ ಪೈಪೋಟಿ ನೀಡುತ್ತಿರುವ ಈ ಸಂದರ್ಭದಲ್ಲಿ ವಿಶ್ವಾಸಾರ್ಹ ಹಾಗೂ ಜವಾಬ್ದಾರಿಯುತ ಪತ್ರಿಕೋದ್ಯಮದ ಅಗತ್ಯ ಇನ್ನಷ್ಟು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
“ಪತ್ರಿಕೋದ್ಯಮ ಮತ್ತು ವಿದ್ಯಾರ್ಥಿಗಳ ಪಾತ್ರ” ವಿಷಯದ ಕುರಿತು ಉಪನ್ಯಾಸ ನೀಡಿದ ವಿಜಯಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಜಾನ್ ಡಿಸೋಜ ಕುಂದಾಪುರ ಅವರು, ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿ ಹೆಚ್ಚು ಸಮಯ ಕಳೆಯುವ ಮೂಲಕ ಪುಸ್ತಕ ಅಧ್ಯಯನದ ಅಭ್ಯಾಸ ಬೆಳೆಸಿಕೊಳ್ಳಬೇಕು. ಓದುವ ಸಂಸ್ಕೃತಿಯೇ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉತ್ತಮ ನಾಗರಿಕರ ನಿರ್ಮಾಣಕ್ಕೆ ಪೂರಕವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿ ಮಂಗಳ ಶಿರ್ವ ಪದವು ಅವರಿಗೆ ದತ್ತಿನಿಧಿ ಹಾಗೂ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಜಿಲ್ಲಾ ಕಾರ್ಯದರ್ಶಿ ಸುರೇಶ್ ಎರ್ಮಾಳು ಹಾಗೂ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಉಪಸ್ಥಿತರಿದ್ದರು.
ಸಂಘದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಹೆಜಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಸ್ವಾಗತಿಸಿದರು. ಪ್ರಕಾಶ ಸುವರ್ಣ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರೆ, ಕೋಶಾಧಿಕಾರಿ ಸಂತೋಷ್ ಕಾಪು ವಂದಿಸಿದರು.
ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.







