ಬಂಟ್ವಾಳ, ಜು. 6: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಒಂದು ಅತ್ಯಂತ ಆಘಾತಕಾರಿ ಮತ್ತು ಭೀಕರ ಘಟನೆ ನಡೆದಿದೆ. ಕಾಲೇಜಿಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕ ದಾಳಿ ನಡೆಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45ರ ಸುಮಾರಿಗೆ ಈ ದಾರುಣ ಘಟನೆ ಸಂಭವಿಸಿದೆ. ಹದಿನೇಳು ವರ್ಷದ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಕಾಲೇಜಿಗೆ ಹೋಗಲು ಬಸ್ಗಾಗಿ ಕಾಯುತ್ತಿದ್ದರು.
ಈ ವೇಳೆ ದುಷ್ಕರ್ಮಿಯೊಬ್ಬ ಏಕಾಏಕಿ ಮಚ್ಚಿನಿಂದ ವಿದ್ಯಾರ್ಥಿನಿಯ ಮೇಲೆ ಭೀಕರವಾಗಿ ದಾಳಿ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಈಗಾಗಲೇ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ದಾಳಿಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿಯಬೇಕಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.





