ಮಂಗಳೂರು: ಮಂಗಳೂರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ನ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಕರ್ವೇಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನಲ್ಲಿ ಈತ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.
ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಮಂಗಳೂರು-ವಿಟ್ಲ ಮಾರ್ಗದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಈತ, ತನ್ನ ಗುಪ್ತಾಂಗ ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಾನೆ. ಅಷ್ಟೇ ಅಲ್ಲದೆ, ವಿದ್ಯಾರ್ಥಿನಿಯರನ್ನು ಹಿಂದಿನ ಸೀಟಿಗೆ ಬರುವಂತೆ ಕರೆದು ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜುಲೈ 10ರಂದು ಆರೋಪಿ ಇರ್ಫಾನ್ನನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ತನಿಖೆಯನ್ನು ತೀವ್ರಗೊಳಿಸಿದ್ದಾರೆ.




