ಪುತ್ತೂರು: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟ ಯುವತಿಯನ್ನು ಪುತ್ತೂರಿನ ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ, 26 ವರ್ಷದ ಪ್ರಜ್ಞಾ ಎಂದು ಗುರುತಿಸಲಾಗಿದೆ. ಮೃತ ಪ್ರಜ್ಞಾ ಅವರು ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ (Community Health Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದಷ್ಟೇ ಇವರು ವೈಯಕ್ತಿಕ ಕಾರಣಗಳಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.



ತೀವ್ರ ಅಸ್ವಸ್ಥಗೊಂಡಿದ್ದ ಪ್ರಜ್ಞಾ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.







