ಮಂಗಳೂರು: ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರವಾಸ ತೆರಳಿದ್ದ ತಂಡವೊಂದರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಯಕ್ಷಧ್ರುವ ಫೌಂಡೇಶನ್ನ ಕಾರ್ಯದರ್ಶಿ ರವಿ ಶೆಟ್ಟಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ತಂಡವೊಂದು ಇತ್ತೀಚೆಗೆ ಎರಡು ಕಾರುಗಳಲ್ಲಿ ಧಾರ್ಮಿಕ ಪ್ರವಾಸಕ್ಕೆ ತೆರಳಿತ್ತು. ತಿರುಪತಿಯಲ್ಲಿ ದೇವರ ದರ್ಶನ ಮುಗಿಸಿ, ಅಲ್ಲಿಂದ ಮಂತ್ರಾಲಯಕ್ಕೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಮಾರ್ಗಮಧ್ಯೆ ಈ ಭೀಕರ ದುರಂತ ಸಂಭವಿಸಿದೆ.



ತಂಡ ಪ್ರಯಾಣಿಸುತ್ತಿದ್ದ ಎರಡು ಕಾರುಗಳ ಪೈಕಿ ಒಂದು ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಂಗಳೂರಿನ ಅಶೋಕನಗರ ನಿವಾಸಿ, ಯಕ್ಷಧ್ರುವ ಫೌಂಡೇಶನ್ನ ಸಕ್ರಿಯ ಕಾರ್ಯದರ್ಶಿಯಾಗಿದ್ದ ರವಿ ಶೆಟ್ಟಿ (50) ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಪ್ರಯಾಣಿಕರಾದ , ಪುರುಷೋತ್ತಮ ಭಂಡಾರಿ, ಸಂದೇಶ್ ರೈ, ಪ್ರದೀಪ್ ಆಳ್ವ ಅವರಿಗೂ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.






