ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಕಾಲೇಜು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಮೇಲೆ ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತ ಬಲವಂತವಾಗಿ ಅತ್ಯಾಚಾರ ಎಸಗಿದ್ದ. ಈತ ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.



ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕೃತ್ಯ ಎಸಗಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ, ಆಕೆಯ ತಾಯಿ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ಸುಮಾರು 5 ರಿಂದ 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಇದರಿಂದ ದಿಗ್ಭ್ರಮೆಗೊಂಡ ತಾಯಿ, ತಕ್ಷಣವೇ ಜುಲೈ 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತಕ್ಷಣವೇ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದರು.
ಜುಲೈ 19 ರಂದು ಸಂಜೆ, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಅಡಗಿದ್ದ ಆರೋಪಿ ಶುಭರಾಜ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದ ಬಳಿಕ, ಜುಲೈ 20 ರಂದು ಆರೋಪಿಯನ್ನು ಮಂಗಳೂರಿನ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.






