ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ಧ 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಗೆ ಸಿಗಲಿದೆ ಹೊಸ ಕಳೆ! ಪ್ರವಾಸಿಗರ ಆಕರ್ಷಣೀಯ ತಾಣವಾಗಿ ರೂಪುಗೊಳ್ಳಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ಶಾಸಕ ಹರೀಶ್ ಪೂಂಜ! ಅತ್ಯಂತ ರಮಣೀಯ ಹಾಗೂ ವಿಶಾಲವಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಮೂಲಗಳಲ್ಲಿ ಒಂದಾದ ‘ಗುರುವಾಯನಕೆರೆ ಕೆರೆ’ ಗೆ ಈಗ ಕೊನೆಗೂ ಕಾಯಕಲ್ಪ ಸಿಗುವ ಕಾಲ ಹತ್ತಿರವಾಗಿದೆ.

ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಈ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಡಲಾಗಿದೆ. ಶಾಸಕರಾದ ಶ್ರೀ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಉನ್ನತಾಧಿಕಾರಿಗಳ ಸಭೆ ನಡೆಯಿತು.


15 ಎಕರೆ ವಿಶಾಲವಾದ ಕೆರೆಯ ಸುತ್ತಮುತ್ತಲಿನ ಪರಿಸರವನ್ನು ಸುಂದರಗೊಳಿಸುವುದು, ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು, ಅಭಿವೃದ್ಧಿ ಕಾರ್ಯಗಳಿಗೆ ಸಿದ್ಧತೆ ನಡೆಸುವುದು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಯೋಜನೆಯನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಕೆರೆಯ ನೈಸರ್ಗಿಕ ಸೌಂದರ್ಯಕ್ಕೆ ಯಾವುದೇ ಧಕ್ಕೆಯಾಗದಂತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಈ ಯೋಜನೆಯನ್ನು ರೂಪಿಸಲು ಶಾಸಕರು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದ್ದಾರೆ.






