ವಿಟ್ಲ: ಮೊಬೈಲ್ ಫೋನ್ ಮೂಲಕ ಪರಿಚಯ ಬೆಳೆಸಿಕೊಂಡು ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೌರ್ಜನ್ಯಕ್ಕೊಳಗಾದ ಬಾಲಕಿ ಇದೀಗ ಮಗುವಿಗೆ ಜನ್ಮ ನೀಡಿದ್ದು, ಆರೋಪಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೇರಳ ಮೂಲದ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಮೊಬೈಲ್ ಮೂಲಕ ಈ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡಿದ್ದ.
ಬಳಿಕ ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನೆನ್ನಲಾಗಿದೆ. ಈ ಘಟನೆ ನಡೆದಿದ್ದು 2025ರ ಡಿಸೆಂಬರ್ 21ರಂದು.
ಇದಾದ ಬಳಿಕ, ಕಳೆದ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದೆ. ತಕ್ಷಣವೇ ಆಕೆಯ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಮರುದಿನ, ಅಂದರೆ ಸೆಪ್ಟೆಂಬರ್ 9ರಂದು ವೈದ್ಯಕೀಯ ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿದ್ದು ಬೆಳಕಿಗೆ ಬಂದಿದ್ದು, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅಪರಾಧ ಕ್ರಮಾಂಕ (Zero FIR) 01/2026 ರಂತೆ ಪೋಕ್ಸೋ ಕಾಯ್ದೆಯ ಕಲಂ 4, 5(J)(ii), 5(L), 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 64(2)(m) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಮಕ್ಕಳ ಕೈಗೆ ಮೊಬೈಲ್ ನೀಡುವ ಮುನ್ನ ಪೋಷಕರು ಎಷ್ಟು ಎಚ್ಚರಿಕೆಯಿಂದ ಇರಬೇಕು ಎಂಬುದಕ್ಕೆ ಈ ಘಟನೆ ಮತ್ತೊಂದು ಎಚ್ಚರಿಕೆಯ ಗಂಟೆಯಾಗಿದೆ.





