ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಇಂಟರ್ಯಾಕ್ಟ್ ಕ್ಲಬ್ನ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಇಂಟರ್ಯಾಕ್ಟ್ ಕ್ಲಬ್ನ ಸಂಯೋಜಕ ಶಿಕ್ಷಕರಾದ ಮಂಜುನಾಥ್ ಹಾಗೂ ಕವನ ಅವರು ವಿದ್ಯಾರ್ಥಿಗಳೊಂದಿಗೆ ಸಹಕರಿಸಿ ಕಾರ್ಯಕ್ರಮದ ಯಶಸ್ಸಿಗೆ ನೆರವಾದರು.

ಮಹಾನ್ ನಾಯಕರ ಆದರ್ಶಗಳಾದ ಸತ್ಯ, ಅಹಿಂಸೆ, ಸರಳತೆ, ಸ್ವಚ್ಛತೆ ಮತ್ತು ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.





