ಬೆಳ್ತಂಗಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ತಂಗಡಿಯಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಗಾಗಿ ವಿಶೇಷ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧ ವೇಷಭೂಷಣಗಳಲ್ಲಿ ಕಂಗೊಳಿಸಿದ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಬೆಳ್ತಂಗಡಿಯ ಅಧ್ಯಕ್ಷರಾದ ಶ್ರೀ ಸಂಪತ್ ಕುಮಾರ್ ಸುವರ್ಣ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಜ್ಞಾನದ ಬೆಳಕು ನೀಡಿರುವ ಈ ವಿದ್ಯಾದೇಗುಲವು ಮಾದರಿ ಶಾಲೆಯಾಗಿ ರೂಪುಗೊಂಡಿದೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ಒದಗಿಸುತ್ತಿರುವ ಈ ವಿದ್ಯಾಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಿ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಝಮೀರ್ ಸಹದಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಪ್ರಭಾಕರ ಭಟ್ ಇಡ್ಯಾ ಅವರು, ಖಾಸಗಿ ಶಾಲೆಗಳ ಪ್ರಭಾವದ ನಡುವೆಯೂ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹೊಂದಿರುವ ಈ ವಿದ್ಯಾಸಂಸ್ಥೆಯು ಸಂಸ್ಕಾರಯುತ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡುವ ಮೂಲಕ ತಾಲೂಕಿಗೆ ಆದರ್ಶ ಶಾಲೆಯಾಗಿ ರೂಪುಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ ಮೋಹನ್ ಕುಮಾರ್ ಸಿ.ಎನ್., ಶಾಲಾ ವಾರ್ಷಿಕೋತ್ಸವ ಸಮಿತಿಯ ಕಾರ್ಯದರ್ಶಿ ಶ್ರೀ ದಿನೇಶ್ ಮಾಳವ, ಕ್ರೀಡಾ ಕಾರ್ಯದರ್ಶಿಗಳಾದ ಶ್ರೀಮತಿ ಅಸ್ಮಾ ಹಾಗೂ ಶ್ರೀಮತಿ ವನಿತಾ, ಗೌರವ ಸಲಹೆಗಾರರಾದ ಶ್ರೀ ಗಣೇಶ್ ಪುಂಡಾಜೆ ಹಾಗೂ ಶ್ರೀಮತಿ ಅಕ್ಷತಾ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕೃಷ್ಣಮೂರ್ತಿ ಆರ್. ಮತ್ತು ಶಾಲಾ ನಾಯಕಿ ಗಣ್ಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ಶೈವಿ ಪಿ. ಶೆಟ್ಟಿ ಅವರು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವುದಕ್ಕಾಗಿ ಹಾಗೂ ಕುಮಾರಿ ಕ್ಷಮಾ ಅವರು ಬೆಳ್ತಂಗಡಿ ದೋಸೆ ಹಬ್ಬದ ಅಂಗವಾಗಿ ನಡೆದ ತಾಲೂಕು ಮಟ್ಟದ ಬಾಲೆ ಪಿಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕಾಗಿ ಅವರ ವಿಶೇಷ ಸಾಧನೆಯನ್ನು ಗುರುತಿಸಿ ಅಭಿನಂದಿಸಲಾಯಿತು.

ಬಳಿಕ ಪೂರ್ವ ಪ್ರಾಥಮಿಕ ತರಗತಿಯ ಪುಟಾಣಿ ಮಕ್ಕಳಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ನಡೆಯಿತು. ಮಕ್ಕಳ ಮನಮೋಹಕ ನೃತ್ಯ ಪ್ರದರ್ಶನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಈ ಬಾರಿಯ ಮಕ್ಕಳ ದಿನಾಚರಣೆಯ ಅತ್ಯಂತ ವಿಶೇಷ ಆಕರ್ಷಣೆಯೆಂದರೆ, ಕಾರ್ಯಕ್ರಮದಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಬಹುಮಾನಗಳನ್ನು ವಿತರಿಸಿರುವುದು. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಹುಮಾನಗಳನ್ನು ವಿತರಿಸಿರುವುದು ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.
ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಶಾಲಾ ಮಕ್ಕಳ ಪೋಷಕರಿಗಾಗಿ ವಿವಿಧ ಮನೋರಂಜನಾತ್ಮಕ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪೋಷಕರು ಅತ್ಯಂತ ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ಮಕ್ಕಳೊಂದಿಗೆ ಸಂಭ್ರಮ ಹಂಚಿಕೊಂಡರು. ಪೋಷಕರ ಸ್ಪರ್ಧೆಗಳ ವಿಜೇತರಿಗೂ ಬಹುಮಾನಗಳನ್ನು ವಿತರಿಸಲಾಯಿತು. ಮಕ್ಕಳ ಪ್ರತಿಭಾ ಪ್ರದರ್ಶನದ ಜೊತೆಗೆ ಪೋಷಕರಿಗೂ ಸಂಭ್ರಮಿಸುವ ಅವಕಾಶ ಕಲ್ಪಿಸಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕರಾದ ಶ್ರೀ ರಾಜೇಶ್ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕೃಷ್ಣಮೂರ್ತಿ ಆರ್. ಅವರು ಸ್ವಾಗತಿಸಿದರು. ಹಿರಿಯ ಶಿಕ್ಷಕರಾದ ಶ್ರೀ ಪಿ. ಶಿವಾನಂದ ಭಂಡಾರಿ ಅವರು ವಂದನಾರ್ಪಣೆ ಸಲ್ಲಿಸಿದರು.
ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ, ಪೋಷಕರಿಗೆ ಮನರಂಜನೆ ಹಾಗೂ ಶಿಕ್ಷಕರು ಮತ್ತು ಪೋಷಕರ ನಡುವಿನ ಬಾಂಧವ್ಯ ವೃದ್ಧಿಗೆ ವೇದಿಕೆಯಾದ ಈ ಮಕ್ಕಳ ದಿನಾಚರಣೆಯು ಎಲ್ಲರ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.





