ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸ್ಕೋರ್, ಉಜಿರೆಯ ಮಾಲಕರಾದ ಶ್ರೀ ಪ್ರವೀಣ್ ಭಟ್ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ವಿಜಯ್ ಡಿಸೋಜಾ, ಕಾರ್ಯದರ್ಶಿಗಳಾದ ಶ್ರೀಮತಿ ಮರ್ಲಿನ್ ಮೆನೇಜಸ್, ಶಾಲಾ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಸ್ಟೀವನ್ ಮೊಂತೇರೊ ಹಾಗೂ ಶ್ರೀಮತಿ ಬಬಿತಾ ಮೋರಸ್ ಮತ್ತು ಶಾಲೆಯ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾದ ಶ್ರೀ ಪ್ರವೀಣ್ ಭಟ್ ಮಾತನಾಡಿ, ಮಕ್ಕಳು ಪ್ರಕೃತಿಯನ್ನು ಪ್ರೀತಿಸುವುದರ ಜೊತೆಗೆ ಅದರ ಸಂರಕ್ಷಣೆ ಹಾಗೂ ಪೋಷಣೆಯ ಮಹತ್ವವನ್ನು ಅರಿತುಕೊಳ್ಳಬೇಕು. ಪ್ರಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಮನೋಭಾವವನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶ್ರೀಮತಿ ಮರ್ಲಿನ್ ಮೆನೇಜಸ್ ಅವರು ಮಾತನಾಡಿ, ಮಕ್ಕಳ ಜೀವನದಲ್ಲಿ ಶಿಸ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಬಾಲ್ಯದಲ್ಲಿಯೇ ಶಿಸ್ತನ್ನು ರೂಢಿಸಿಕೊಂಡರೆ ಅದು ಅವರ ಭವಿಷ್ಯದ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸುವ ಸಂದೇಶವನ್ನು ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಹಶಿಕ್ಷಕಿ ಶ್ರೀಮತಿ ಜೋಯ್ಸಿ ಅವರು ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ನಿಶಾ ಅವರು ವಂದನಾರ್ಪಣೆ ಸಲ್ಲಿಸಿದರು. ಸಹಶಿಕ್ಷಕಿ ಶ್ರೀಮತಿ ತೇಜಸ್ವಿನಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.
ಮಕ್ಕಳ ಸಂತೋಷ, ಸಂಭ್ರಮ ಹಾಗೂ ಉತ್ಸಾಹದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.





