ಉಜಿರೆ:(ಡಿ.10) ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಕೌಶಲ್ಯಯುತ ಹೆಜ್ಜೆಗಳನ್ನು ಮೆಲುಕು ಹಾಕುವ ಉದ್ದೇಶದೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುಮಾರ್ ಹೆಗ್ಡೆ ಹೇಳಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಅನ್ಯಕೋಮಿನ ವ್ಯಕ್ತಿಗಳಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ
ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಡಿಸೆಂಬರ್ 13 ಮತ್ತು 14ರಂದು ಕಾರ್ಯಕ್ರಮಗಳು ನಡೆಯಲಿದ್ದು, ಈ ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಡಿ.13 ರಂದು ಬೆಳಿಗ್ಗೆ 10ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ,ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ರಮೇಶ್ ಸಾಲಿಯಾನ್, ವಿಶ್ರಾಂತ ಪ್ರಾಧ್ಯಾಪಕಿ ಡಾ.ಎಂ.ವೈ.ಮಂಜುಳಾ, ಕ್ಷೇಮವನದ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ಮತ್ತು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಎಸ್.ಡಿ.ಎಂ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಚಾಲಕಿ ಡಾ.ವಂದನಾ ಜೈನ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗ್ಡೆ, ಅಶ್ವಿನಿ ಎಸ್ ಶೆಟ್ಟಿ, ಡಾ.ಮಹೇಶ್ ಬಾಬು, ಡಾ.ಸುಧೀರ್ ಕೆ.ವಿ., ಉಪಸ್ಥಿತರಿದ್ದರು.