ಬೆಂಗಳೂರು:(ಜು.೧೪) ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ.

ಇದನ್ನೂ ಓದಿ: ⭕ದೆಹಲಿ: 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ
ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.

ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.


ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.
