ಮಂಗಳೂರು:(ಆ.31) ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: 🟠ಉಜಿರೆ : ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಪುತ್ತೂರು ಕಬಕ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ನಿತೇಶ್ ಜೊತೆ ಈತನ ತಂದೆ ರಾಮಣ್ಣ ಪೂಜಾರಿ (62) ಮತ್ತು ಬಾವ ನಿಖಿತಾಶ್ ಸುವರ್ಣ (40) ನಿಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.
ಅಪರಾಧಿ ನಿತೇಶ್ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಸುತ್ತಾಡಿಸಿ, ಬಳಿಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲದೇ, ಆಕೆಯ ಮನೆಗೂ ಹೋಗಿ ಅತ್ಯಾಚಾರ ನಡೆಸಿದ್ದ. ಬಳಿಕ ಯುವತಿ ವಿವಾಹವಾಗಲು ಕೇಳಿಕೊಂಡಾಗ ಆತ ನಿರಾಕರಿಸಿದ್ದ.
ಪರಸ್ಪರ ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ಹೇಳಿದ್ದ. ನಿತೇಶ್‌ನ ತಂದೆ ಮತ್ತು ಬಾವನ ಬಳಿ ಕೇಳಿಕೊಂಡಾಗಲೂ ಅವರು ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಅಪರಾಧಿ ನಿತೇಶ್‌ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ,1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ರಾಮಣ್ಣ ಪೂಜಾರಿ ಮತ್ತು ನಿಖಿತಾಶ್‌ಗೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿದ್ದಾರೆ. ಅಲ್ಲದೇ, ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.